- ಪ್ರತಿ ಕಂದಾಯ ಗ್ರಾಮ ಹಾಗೂ ಅದರಡಿಯ ಉಪಗ್ರಾಮಗಳ ಗ್ರಾಮ ಸಭೆಯನ್ನು ವರ್ಷದಲ್ಲಿ ನಾಲ್ಕು ಬಾರಿ ಕರೆಯತಕ್ಕದ್ದು. ಪರಂತು ಕರಾವಳಿ ಮತ್ತು ಮಲೆನಾಡು ವ್ಯಾಪ್ತಿಯಡಿಯಲ್ಲಿ ಬರುವ ಕಂದಾಯ ಗ್ರಾಮಗಳಲ್ಲಿ ವಾಸಿಸುವ ಮನೆಗಳು ಕಡಿಮೆ ಇರುವ ಕಾರಣ ಸಮೀಪದಲ್ಲಿರುವ ಮತ್ತೊಂದು ಕಂದಾಯ ಗ್ರಾಮವನ್ನು ಸೇರಿಸಿಕೊಂಡು ಗ್ರಾಮ ಸಭೆಯನ್ನು ನಡೆಸುವುದು i, ಸಾಮಾನ್ಯ ಗ್ರಾಮ ಸಭೆಗಳು:- ಎಪ್ರಿಲ್ 24 ಮತ್ತು ಅಕ್ಟೋಬರ್-02 ಅನ್ನು ಹೊರತುಪಡಿಸಿ, ತದನಂತರ ಏಳು ಕೆಲಸದ ದಿನಗಳ ಕಾಲಾವಧಿಯಲ್ಲಿ ಪ್ರತಿ ಕಂದಾಯ ಗ್ರಾಮದಲ್ಲಿ ಗ್ರಾಮ ಸಭಾ ದಿನಾಂಕಗಳನ್ನು ನಿಗಧಿಪಡಿಸತಕ್ಕದ್ದು ii, ವಿಶೇಷ ಸಭೆಗಳು:- ಆಗಸ್ಟ್-15 ಮತ್ತು ಜನವರಿ 26 ಅನ್ನು ಹೊರತುಪಡಿಸಿ, ತದನಂತರ ಏಳು ಕೆಲಸದ ದಿನಗಳ ಕಾಲಾವಧಿಯಲ್ಲಿ ಪ್ರತಿ ಕಂಂದಾಯ ಗ್ರಾಮದಲ್ಲಿ ವಿಶೇಷ ಗ್ರಾಮ ಸಭಾ ದಿನಾಂಕಗಳನ್ನು ನಿಗಧಿಪಡಿಸತಕ್ಕದ್ದು.
ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಗ್ರಾಮ ಪಂಚಾಯತಿಯ ಅಧ್ಯಕ್ಷರ ಜೊತೆ ಚರ್ಚಿಸಿ, ಗ್ರಾಮ ಸಭೆಗೆ ಅಧಿಕಾರಿಗಳನ್ನು ನಿಯೋಜಿಸತಕ್ಕದ್ದು.
ಗ್ರಾಮ ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತಿಯ ಅಧ್ಯಕ್ಷರು ವಹಿಸತಕ್ಕದ್ದು. ಅಧ್ಯಕ್ಷರ ಅನುಪಸ್ಥಿತಿಯಲ್ಲಿ ಉಪಾಧ್ಯಕ್ಷರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು. ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅನುಪಸ್ಥಿತಿಯಲ್ಲಿ ಕಂದಾಯ ಗ್ರಾಮದ ವ್ಯಾಪ್ತಿಯಲ್ಲಿ ಚುನಾಯಿತನಾದ ಹಿರಿಯ ಗ್ರಾಮ ಪಂಚಾಯಿತಿಯ ಸದಸ್ಯರು ಗ್ರಾಮ ಸಭೆಯ ಅಧ್ಯಕ್ಷತೆಯನ್ನು ವಹಿಸುವುದು. ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಅನುಪಸ್ಥಿತಿಯಲ್ಲಿ ಗ್ರಾಮ ಸಭೆ ಆಯ್ಕೆ ಮಾಡಿದ ಒಬ್ಬರು ಅಧ್ಯಕ್ಷತೆಯನ್ನು ವಹಿಸುವುದು, ಗ್ರಾಮ ಸಭಾದಲ್ಲಿರುವ ಒಟ್ಟು ಮತದಾರರ ಶೇ 10 ರಷ್ಟು ಅಥವಾ 100 ಸದಸ್ಯರು ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟು ಸಂಖ್ಯೆ ಕೋರಂ ಆಗಿರುತ್ತದೆ.
ಸಭೆಗೆ ನಿಗಧಿಪಡಿಸಿದ ಸಮಯದಲ್ಲಿ ಕೋರಂ ಇಲ್ಲದಿದ್ದರೆ, ಅಧ್ಯಕ್ಷತೆ ವಹಿಸಿರುವ ವ್ಯಕ್ತಿಯು ಮೂವತ್ತು ನಿಮಿಷಗಳ ಕಾಲಾವಕಾಶವನ್ನು ನೀಡಿ ಕಾಯತಕ್ಕದ್ದು. 6. ಮೂವತ್ತು ನಿಮಿಷದ ನಂತರವೂ ಕೋರಂ ಇಲ್ಲದಿದ್ದರೆ ಅಧ್ಯಕ್ಷತೆ ವಹಿಸಿರುವ ವ್ಯಕ್ತಿಯು ಸಾರ್ವಜನಿಕ ರಜಾ ದಿನ ಅಲ್ಲದ ಮುಂದಿನ ದಿನಕ್ಕೆ ಅಥವಾ ಮೂರು ಕೆಲಸದ ದಿನದೊಳಗೆ ಮತ್ತೊಂದು ದಿನಾಂಕಕ್ಕೆ ಸಭೆಯನ್ನು ಮುಂದೂಡತಕ್ಕದ್ದು. ಮುಂದೂಡಲ್ಪಟ್ಟ ಸಭೆಗೆ ಕೋರಂ ಅವಶ್ಯಕತೆ ಇರುವುದಿಲ್ಲ.
ಒಂದು ವರ್ಷದಲ್ಲಿ ಪ್ರತಿ ಕಂದಾಯ ಗ್ರಾಮದಲ್ಲಿ ಒಂದು ಬಾರಿ ಕರೆಯಲಾಗುವ ವಿಶೇಷ ಮಹಿಳಾ, ಮಕ್ಕಳ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳು ಮತ್ತು ವಿಶೇಷ ಚೇತನರು ಹಾಗೂ ವಿವಿಧ ದುರ್ಬಲ ವರ್ಗಗಳ ಗ್ರಾಮ ಸಭೆಗಳನ್ನು ಪ್ರತ್ಯೇಕವಾಗಿ ಸಮಯ ನಿಗದಿ ಪಡಿಸಿ ಮತ್ತು ಸಭೆ ನಡೆಸಿ, ಚರ್ಚಿಸಿದ ನಿರ್ಣಯಗಳನ್ನು ಯಥಾವತ್ತಾಗಿ ಇಲಾಖೆಗಳು ಕಾರ್ಯಗತಗೊಳಿಸತಕ್ಕದ್ದು.